ತಾಲ್ಲೂಕು ಪಂಚಾಯ್ತಿ ಸಾಮಾನ್ಯ ಸಭೆ

0
170

ಬಳ್ಳಾರಿ/ಹೊಸಪೇಟೆ:ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಕಾಡುತ್ತಿದ್ದು, ಶೀಘ್ರವೇ ಶೌಚಾಲಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗೆ ಶಿಕ್ಷಣ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಾಪಂ ಇ ಓ ಟಿ.ವೆಂಕೋಬಪ್ಪ ಹೇಳಿದರು.
ತಾಪಂ ಅಧ್ಯಕ್ಷೆ ಜೋಗದ ನೀಲಮ್ಮ ಪಂಚಪ್ಪ ಅಧ್ಯಕ್ಷತೆಯಲ್ಲಿ ವಿದ್ಯಾರಣ್ಯ ಸಭಾಂಗಣದಲ್ಲಿ ಗುರುವಾರ ಜರುಗಿದ ತಾಲ್ಲೂಕು ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿ, ತಾಲ್ಲೂಕಿನ ಬಹುತೇಕ ಶಾಲೆಗಳಲ್ಲಿ ಶೌಚಾಲಯ ಹಾಗೂ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ದೂರುಗಳು ಕೇಳಿ ಬರುತ್ತಿದ್ದು, ಕೂಡಲೇ ಈ ಬಗ್ಗೆ ಕ್ರಮವಹಿಸಬೇಕು ಎಂದು ತಾಕೀತು ಮಾಡಿದರು.
ಕೃಷಿ ಇಲಾಖೆ ವತಿಯಿಂದ ಕೃಷಿ ಹೊಂಡ ನಿರ್ಮಾಣಕ್ಕಾಗಿ ಕೃಷಿ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ರೈತರು, ಕೃಷಿ ಹೊಂಡ ನಿರ್ಮಾಣಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕೃಷಿ ಅಧಿಕಾರಿ ಮಂಜುನಾಥ ಕನ್ನಾರಿ ಸಭೆಗೆ ಮಾಹಿತಿ ನೀಡಿದರು.
ತೋಟಗಾರಿಕೆ ಬೆಳೆಗೆ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿ ತಂದಿದ್ದು, ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಮುಂದೆ ಬರುವ ರೈತರಿಗೆ ಶೇ.50ರಷ್ಟು ರಿಯಾಯತಿ ನೀಡಲಾಗುವುದು ಎಂದು ತೋಟಗಾರಿಕೆ ಅಧಿಕಾರಿ ರಾಜೇಂದ್ರ ತಿಳಿಸಿದರು.
ತಾಲ್ಲೂಕಿನ ನಂ-10ಮುದ್ದಾಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ನಡುವೆ ಓರ್ವ ಶಿಕ್ಷಕ ಮದ್ಯಪಾನ ಮಾಡಿ ಶಾಲೆಗೆ ಬರುತ್ತಿದ್ದು, ಇದರಿಂದ ವಿದ್ಯಾರ್ಥಿಗಳು ಮುಜಗರ ಪಡುವಂತಾಗಿದ್ದು, ಅವರ ಭವಿಷ್ಯದ ಮೇಲೆ ದುಷ್ಪಪರಿಣಾಮ ಬೀರುತ್ತಿದೆ. ಇದನ್ನು ಶಿಕ್ಷಣ ಇಲಾಖೆ ಗಂಭೀರವಾಗಿ ಪರಿಗಣಿಸಿ, ಶಿಕ್ಷಕನ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಸದಸ್ಯ ಶಿವಮೂರ್ತಿ ಆಗ್ರಹಿಸಿದರು.
ಅಧಿಕಾರಿಗಳು ಪೂರ್ವ ಸಿದ್ಧತೆ ಇಲ್ಲದೇ ಸಭೆಗೆ ಬರುತ್ತಿದ್ದು, ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಇರುವುದಿಲ್ಲ. ಸರ್ಕಾರದ ಯೋಜನೆಗಳ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಇರದೇ ಹೋದರೆ, ಸರ್ಕಾರದ ಯೋಜನೆಗಳು ಜನ-ಸಮಾನ್ಯರನ್ನು ತಲುಪುವುದು ಹೇಗೆ ? ಎಂದು ಸ್ಥಾಯಿ ಸಮಿತಿ ಅಧ್ಯಕ್ಷ ರಾಜಪ್ಪ ಬೇಸರ ವ್ಯಕ್ತಪಡಿಸಿದರು. ಉಪಾಧ್ಯಕ್ಷ ಗಾದಿಲಿಂಗಪ್ಪ ಹಾಗೂ ಸದಸ್ಯರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

LEAVE A REPLY

Please enter your comment!
Please enter your name here