ಬಾಲಕಿಯರ ವಿದ್ಯಾರ್ಥಿನಿಲಯ ಉದ್ಘಾಟನೆ

0
136

ವಿದ್ಯಾರ್ಥಿ ನಿಲಯಗಳಲ್ಲಿನ ಕಷ್ಟ ಸುಖ ನನಗೂ ಗೊತ್ತು: ಸಚಿವ ಕಾಗೋಡು ತಿಮ್ಮಪ್ಪ

ಶಿವಮೊಗ್ಗ :`ನಾನು ಕಾಲೇಜು ದಿನಗಳಲ್ಲಿ ಬೆಂಗಳೂರಿನಲ್ಲಿರುವ ಆರ್ಯ ಈಡಿಗ ಸಂಘದ ವಿದ್ಯಾರ್ಥಿ ನಿಲಯದಲ್ಲಿ ಇದ್ದು ಕಲಿತವನು.. ವಿದ್ಯಾರ್ಥಿ ನಿಲಯಗಳಲ್ಲಿನ ಕಷ್ಟ ಸುಖ ನನಗೂ ಗೊತ್ತು. ವಿದ್ಯಾರ್ಥಿನಿಗಳು ಲಭಿಸಿರುವ ಈ ಉತ್ತಮ ಅವಕಾಶವನ್ನು ಬಳಸಿಕೊಂಡು ಉನ್ನತ ಶಿಕ್ಷಣ ಪಡೆಯಲು ಪ್ರಯತ್ನಿಸಬೇಕು ಎಂದು ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪ ಅವರು ತಿಳಿಸಿದರು.
ಅವರು ಭಾನುವಾರ ನಗರದ ಹೊರವಲಯದಲ್ಲಿ 5ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ಸುಸಜ್ಜಿತ ವಿದ್ಯಾರ್ಥಿ ನಿಲಯವನ್ನು ಉದ್ಘಾಟಿಸಿ ಮಾತನಾಡಿದರು.
ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗಾಗಿ ರಾಜ್ಯ ಸರ್ಕಾರ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಿದೆ. ವಿದ್ಯಾರ್ಥಿ ನಿಲಯಗಳ ಉದ್ಘಾಟನೆ ದೇವಾಲಯ ಉದ್ಘಾಟನೆಗೆ ಸಮಾನವಾಗಿದ್ದು, ಅದಕ್ಕಿಂತಲೂ ಮಿಗಿಲಾಗಿದೆ. ವಿದ್ಯಾರ್ಥಿಗಳು ತಮಗೆ ಲಭಿಸಿರುವ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆದು ಸಭ್ಯ ನಾಗರಿಕರಾಗಬೇಕು. ಕೇವಲ ಶಿಕ್ಷಣದ ಕಡೆಗೆ ಮಾತ್ರ ಹೆಚ್ಚಿನ ಗಮನ ಹರಿಸಿ ಹಾಸ್ಟೆಲ್‍ನಲ್ಲಿ ಇರುವಷ್ಟು ಕಾಲ ಒಂದೇ ಕುಟುಂಬದ ರೀತಿಯಲ್ಲಿ ಇರಬೇಕು ಎಂದು ಅವರು ಕಿವಿ ಮಾತು ಹೇಳಿದರು.
ಅಧಿಕಾರಿಗಳು ವಿದ್ಯಾರ್ಥಿ ನಿಲಯಗಳ ನಿರ್ವಹಣೆ ಬಗ್ಗೆ ನಿರಂತರ ನಿಗಾ ವಹಿಸಬೇಕು. ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಗುಣಮಟ್ಟದ ಆಹಾರ, ವೈದ್ಯಕೀಯ ನೆರವು ದೊರೆಯುವುದನ್ನು ಖಾತ್ರಿಪಡಿಸಬೇಕು. ವಾರ್ಡನ್‍ಗಳು ವಿದ್ಯಾರ್ಥಿನಿಯರ ಕಷ್ಟ ಸುಖಗಳಿಗೆ ಸ್ಪಂದಿಸಬೇಕು ಎಂದು ಸಚಿವರು ತಿಳಿಸಿದರು.
ಶಾಸಕಿ ಶಾರದಾ ಪೂರ್ಯನಾಯ್ಕ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ವೇದಾ ವಿಜಯ ಕುಮಾರ್, ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ರೇಖಾ ಉಮೇಶ್, ಜಿಲ್ಲಾ ಪಂಚಾಯತ್ ಸದಸ್ಯ ಕಲಗೋಡು ರತ್ನಾಕರ ಅವರು ಮಾತನಾಡಿದರು. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎಚ್.ವಿ.ಮಂಜುನಾಥ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಈ ವಿದ್ಯಾರ್ಥಿ ನಿಲಯದಲ್ಲಿ 200ವಿದ್ಯಾರ್ಥಿನಿಯರಿಗೆ ಪ್ರವೇಶಕ್ಕೆ ಅವಕಾಶವಿದೆ ಎಂದರು.

LEAVE A REPLY

Please enter your comment!
Please enter your name here