ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಸೋಶಿಯಲ್ ಮೀಡಿಯಾ ರೀಲ್ಸ್ ಮಾಡುವ ಹುಚ್ಚಿಗೆ ಪೊಲೀಸರು ಬ್ರೇಕ್ ಹಾಕಿದ ಘಟನೆ ಬೆಳಕಿಗೆ ಬಂದಿದೆ. ಹೆಲ್ಮೆಟ್ ಧರಿಸದೆ ಬೈಕ್‌ನಲ್ಲಿ ತ್ರಿಬಲ್ ರೈಡ್ ಮಾಡಿಕೊಂಡು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದ ಮೂವರ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

‘ಹುಲಿ ಹುಲಿ’ ಎಂದು ಬೈಕ್ ಮೇಲೆ ಮೂವರು ಸೇರಿ ರೀಲ್ಸ್ ಮಾಡಿದ್ದ ರೀಲ್ಸ್ ಮಂಜು, ಗಂಗಾರಂಗ ಮತ್ತು ಸವಿತಾ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಕ್ರಮ ಜರುಗಿಸಿದ್ದಾರೆ. ಹೆಲ್ಮೆಟ್ ಧರಿಸದೆ ಹಾಗೂ ತ್ರಿಬಲ್ ರೈಡ್ ಮಾಡಿಕೊಂಡು ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಹೆಲ್ಮೆಟ್ ಧರಿಸದೆ ಅವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ.
ಈ ವೇಳೆ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದ ಕಾರಣಕ್ಕೆ 1 ಸಾವಿರ ರೂಪಾಯಿ ದಂಡ ವಿಧಿಸಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಟ್ರಾಫಿಕ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಸೂಚಿಸಿದ್ದಾರೆ.
ಪೊಲೀಸರಿಗೆ ದಂಡ ಕಟ್ಟಿ ಕ್ಷಮೆಯಾಚಿಸುವುದರೊಂದಿಗೆ “ಹೆಲ್ಮೆಟ್ ಧರಿಸಿ ಪ್ರಾಣ ಉಳಿಸಿಕೊಳ್ಳುವಂತೆ” ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದ್ದಾರೆ.

ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ವಿಡಿಯೋ ಆಧರಿಸಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.







